ಮಂಗಳೂರು: ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ನೀಡಲಾಗುವ ರಾಜ್ಯಮಟ್ಟದ ಸಹಕಾರ ರತ್ನ ಪುರಸ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಸಹಕಾರಿಗಳಾದ ಜಾಕೆ ಮಾಧವ ಗೌಡ, ಪದ್ಮನಾಭ ಕೊಟ್ಟಾರಿ, ಎಚ್. ವಸಂತ ಬೆರನಾಡ್ ಹಾಗೂ ಉಡುಪಿ ಜಿಲ್ಲೆಯಿಂದ ಎಸ್.ಜಯರಾಮ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.
https://chat.whatsapp.com/FCEnlTkAKCC0MGPhXtX4i4
ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ ರಾಜ್ಯಮಟ್ಟದ ಸಹಕಾರ ರತ್ನ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸಿದ್ದು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ವರು ಸಹಕಾರಿಗಳು ಈ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ನವೆಂಬರ್ ೧೪ರಂದು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವತಿಯಿಂದ ನಡೆಯುವ ರಾಜ್ಯಮಟ್ಟದ ಸಹಕಾರ ಸಪ್ತಾಹ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಮಾಜಿ ಶಾಸಕರಾಗಿರುವ ಪದ್ಮನಾಭ ಕೊಟ್ಟಾರಿಯವರು ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದು, ಕಲ್ಲಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರೂ ಆಗಿದ್ದಾರೆ. ಕೃಷಿ ಮತ್ತು ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ ಸರ್ಕಾರದ ಸವಲತ್ತುಗಳನ್ನು ಒದಗಿಸುವಲ್ಲಿ ಅವರು ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಜಾಕೆ ಮಾಧವ ಗೌಡ ಅವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಮಾಜಿ ಉಪಾಧ್ಯಕ್ಷರು. ಪ್ರಸ್ತುತ ಪಂಬೆತ್ತಾಡಿ ಕೃಏಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು. ಸಹಕಾರಿ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದು, ಸುಳ್ಯ ತಾಲೂಕು ಕೃಷಿ ಮಾರುಕಟ್ಟೆ ಸಮಿತಿಯ ಮಾಜಿ ಅಧ್ಯಕ್ಷರಾಗಿದ್ದರು. ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸುಳ್ಯ ಭೂ ಅಭಿವೃದ್ಧಿ ಬ್ಯಾಂಕ್, ಸುಳ್ಯ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಹಕಾರಿ ಸಂಘಗಳ ಅಧ್ಯಕ್ಷರಾಗಿದ್ದರು.
ಎಚ್. ವಸಂತ ಬೆರ್ನಾಡ್ ಅವರು ಪ್ರಿಯದರ್ಶಿನಿ ಸಹಕಾರ ಸಂಘ (ನಿ.), ಹಳೆಯಂಗಡಿ ಇದರ ಅಧ್ಯಕ್ಷರು. ಪಡುಪಣಂಬೂರು ಸಹಕಾರಿ ವ್ಯವಸಾಯಿಕ ಸಂಘದ ನಿರ್ದೇಶಕರಾಗಿ ಸುಧೀರ್ಘ 31 ವರ್ಷಗಳಿಂದ ನಿರ್ದೇಶಕರಾಗಿದ್ದರು. 2021ರಲ್ಲಿ ಹಳೆಯಂಗಡಿಯಲ್ಲಿ ಪ್ರಿಯದರ್ಶಿನಿ ಸಹಕಾರ ಸಂಘವನ್ನು ಸ್ಥಾಪಿಸಿ ಅತ್ಯಲ್ಪ ಅವಧಿಯಲ್ಲೇ ಉಭಯ ಜಿಲ್ಲೆಗಳಲ್ಲಿ ಗುರುತಿಸಲ್ಪಟ್ಟ ಪ್ರಗತಿಪರ ಸಹಕಾರಿ ಸಂಸ್ಥೆಯಾಗಿ ರೂಪಿಸಿದ್ದಾರೆ.
ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಎಸ್ ಜಯರಾಮ ಶೆಟ್ಟಿಯವರು ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರು. ಇಪ್ಪತ್ತರೆಡು ವರ್ಷಗಳಿಂದ ಅವರು ಅಧ್ಯಕ್ಷರಾಗಿ ಸಂಘವನ್ನು ಮುನ್ನಡೆಸುತ್ತಿದ್ದಾರೆ. ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಹಕಾರ ಸಂಘದ ನಿರ್ದೇಶಕರಾಗಿದ್ದರು.

