ಮಂಗಳೂರಿನಲ್ಲಿ ನವಂಬರ್ 16ರಂದು ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ
ಸಹಕಾರ ಜಾಥಾದಲ್ಲಿ 32 ಟ್ಯಾಬ್ಲೋಗಳು ಭಾಗಿ, ಕರಾವಳಿ ಉತ್ಸವ ಮೈದಾನದಲ್ಲಿ ಅದ್ದೂರಿ ಕಾರ್ಯಕ್ರಮ
ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಮಾಹಿತಿ
ಮಂಗಳೂರು: ಈ ಬಾರಿಯ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಕರಾವಳಿ ಭಾಗದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಪರಂಪರೆಗೆ ನಾಂದಿ ಹಾಕಲಾಗಿದ್ದು ಉಭಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳಿಗೆ ಸಹಕಾರ ಮಾಣಿಕ್ಯ ಪ್ರಶಸ್ತಿ ನೀಡಲಾಗುತ್ತಿದೆ.
ಸೋಮವಾರ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ..ಎನ್ ರಾಜೇಂದ್ರ ಕುಮಾರ್ ಈ ಮಾಹಿತಿ ನೀಡಿದರು.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸುವ ಉದ್ದೇಶದಿಂದ 2024ನೇ ಸಾಲಿನಿಂದ ಅಖಿಲ ಭಾರತ ಸಹಕಾರ ಸಪ್ತಾಹದ ಸಂಭ್ರಮ ಆಚರಣೆಯ ಸಂದರ್ಭ “ಸಹಕಾರ ಮಾಣಿಕ್ಯ” ಪ್ರಶಸ್ತಿ ನೀಡಲುನಿರ್ಧರಿಸಲಾಗಿದೆ. ಉಭಯ ಜಿಲ್ಲೆಗಳಿಂದ ತಲಾ ಒಂದರಂತೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಹಾಗೂ ಕ್ರೆಡಿಟ್ ಕೋ-ಆಪರೇಟಿವ್ ಸಹಕಾರ ಸಂಘಕ್ಕೆ ಒಂದು ಪ್ರಶಸ್ತಿ ನೀಡಲಾಗುವುದು. “ಸಹಕಾರ ಮಾಣಿಕ್ಯ” ಪ್ರಶಸ್ತಿಯ ಜೊತೆಗೆ 5 ಗ್ರಾಂ ಚಿನ್ನದ ಪದಕ, ರೂ.10,000 ನಗದು ಹಾಗೂ ಪಾರಿತೋಷಕ ನೀಡಿ ಗೌರವಿಸಲಾಗುವುದು. ಸಾಮಾನ್ಯ ವಿಭಾಗದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳ ಪೈಕಿ ಉಭಯ ಜಿಲ್ಲೆಗಳಲ್ಲಿ ಒಂದರಂತೆ ಹಾಗೂ ಹೈನುಗಾರಿಕೆ, ಕ್ರೆಡಿಟ್ ಸೊಸೈಟಿ, ಮೀನುಗಾರ ಸಹಕಾರ ಸಂಘ, ಸೌಹಾರ್ದ ಸಹಕಾರಿ ಸಂಘ ಹಾಗೂ ಮಹಿಳಾ ಸಹಕಾರಿ ಸಂಘಕ್ಕೆ ಉಭಯ ಜಿಲ್ಲೆಗಳಿಂದ ಒಂದು ಹಾಗೂ 2023-24ನೇ ಸಾಲಿನಲ್ಲಿ ಶತಮಾನೋತ್ಸವ ಪೂರೈಸಿದ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಗೌರವಿಸಲಾಗುವುದು. ಮೂಡುಬಿದಿರೆಯ ಸಹಕಾರ ತರಬೇತಿ ಕೇಂದ್ರದಲ್ಲಿ ಪ್ರಥಮ ಹಾಗೂ ದ್ವಿತೀಯ ರ್ಯಾಂಕ್ ವಿಜೇತರನ್ನು ಸಮಾರಂಭದಲ್ಲಿ ಪುರಸ್ಕರಿಸಲಾಗುವುದು ಎಂದು ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದರು.
ಪ್ರತಿವರ್ಷ ನವೆಂಬರ್ 14ರಿಂದ 20ರವರೆಗೆ ದೇಶಾದ್ಯಂತ “ಅಖಿಲ ಭಾರತ ಸಹಕಾರ ಸಪ್ತಾಹ” ನಡೆಯುತ್ತಿದೆ. ಈ ಸಪ್ತಾಹದ ಭಾಗವಾಗಿ ನವಂಬರ್ 16ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ ನಡೆಯಲಿದೆ. ಉದ್ಯಮಶೀಲತೆ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಎಂಬ ವಿಷಯದಲ್ಲಿ ಮಂಗಳೂರಿನಲ್ಲಿ ಕಾರ್ಯಕ್ರಮ ನಿಗದಿಯಾಗಿದ್ದು, ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಲಿದೆ. ಬೆಳಗ್ಗೆ 10ರಿಂದ ನಡೆಯುವ ಕಾರ್ಯಕ್ರಮ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ರಿ, ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ಎಲ್ಲಾ ವಿಧದ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಈ ರಾಜ್ಯಮಟ್ಟದ ಕಾರ್ಯಕ್ರಮ ನಡೆಯಲಿದೆ ಎಂದು ಡಾ.ರಾಜೇಂದ್ರ ಕುಮಾರ್ ಮಾಹಿತಿ ನೀಡಿದರು.
https://chat.whatsapp.com/Ge11n7QCiMj5QyPvCc0H19
ಮಂಗಳೂರಿನಲ್ಲಿ ನವೆಂಬರ್ 16ರಂದು ನಡೆಯುವ ರಾಜ್ಯ ಮಟ್ಟದ ಸಹಕಾರ ಸಪ್ತಾಹವನ್ನು ಅರ್ಥಪೂರ್ಣವಾಗಿಸುವ ಉದ್ದೇಶದಿಂದ ವಸ್ತುಪ್ರದರ್ಶನ ಮಳಿಗೆ ಆಯೋಜಿಸಲಾಗಿದ್ದು, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಉದ್ಘಾಟಿಸುವರು. ಸಹಕಾರ ಸಪ್ತಾಹದ ಉದ್ಘಾಟನೆಯನ್ನು ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಾಡಲಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ “ಉತ್ತಮ ಸಹಕಾರ ಸಂಘʼʼಗಳಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ‘ಶತಮಾನೋತ್ಸವ ಪೂರೈಸಿದ ಸಹಕಾರ ಸಂಘಗಳಿಗೆ ಪುರಸ್ಕಾರ’ ಪ್ರದಾನ ಮಾಡಲಿದ್ದಾರೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ, ಶಾಸಕ ಜಿ.ಟಿ.ದೇವೇಗೌಡ ಉತ್ತಮ ಸ್ವಸಹಾಯ ಸಂಘಗಳಿಗೆ ಪುರಸ್ಕಾರ ನೀಡಲಿದ್ದಾರೆ. ಸಂಸದ ಕ್ಯಾ.ಬ್ರಿಜೇಶ್ ಚೌಟ ಸಹಕಾರ ಸಪ್ತಾಹದ ಧ್ವಜಾರೋಹಣ ಮಾಡಲಿದ್ದಾರೆ. ಶಾಸಕ ವೇದವ್ಯಾಸ ಕಾಮತ್ ಸಹಕಾರ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕ ಡಾ.ವೈ.ಭರತ್ ಶೆಟ್ಟಿ, ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜ, ಕಿಶೋರ್ ಕುಮಾರ್ ಬೊಟ್ಯಾಡಿ, ಶಾಸಕ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಮಹಾಮಂಡಳದ ಅಧ್ಯಕ್ಷ ಯಶಪಾಲ್ ಸುವರ್ಣ ಭಾಗವಹಿಸಲಿದ್ದಾರೆ.
ನಬಾರ್ಡ್ ಬೆಂಗಳೂರು ಇದರ ಮುಖ್ಯ ಮಹಾಪ್ರಬಂಧಕ ಕೆ.ವಿ.ಎಸ್.ಎಸ್.ಎಲ್.ವಿ. ಪ್ರಸಾದ್ ರಾವ್, ಮಂಗಳೂರು ಮೇಯರ್ ಮನೋಜ್ ಕುಮಾರ್ ಕೋಡಿಕಲ್ ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಗೌರವ ಉಪಸ್ಥಿತರಿರುವರು. ವಿಶೇಷ ಆಹ್ವಾನಿತರಾಗಿ ಸಹಕಾರ ಇಲಾಖೆಯ ಸರಕಾರದ ಕಾರ್ಯದರ್ಶಿ ಅಜಯ್ ನಾಗಭೂಷಣ್ ಎಂ.ಎನ್., ಸಹಕಾರ ಸಂಘಗಳ ನಿಬಂಧಕ ಟಿ.ಎಚ್.ಎಂ.ಕುಮಾರ್., ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಭಾಗವಹಿಸಲಿರುವರು.
ಸಹಕಾರ ಸಪ್ತಾಹದ ಅಂಗವಾಗಿ “ಸಹಕಾರ ಜಾಥಾ” ಆಯೋಜನೆ ಮಾಡಲಾಗಿದ್ದು, ಬೆಳಗ್ಗೆ 9ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಆವರಣದಿಂದ ಕರಾವಳಿ ಉತ್ಸವ ಮೈದಾನದವರೆಗೆ ಸಾಂಸ್ಕೃತಿಕ ಕಲಾಪ್ರಕಾರಗಳ ಹಾಗೂ ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿದ 32 ವಿವಿಧ ಟ್ಯಾಬ್ಲೊಗಳೊಂದಿಗೆ ನಡೆಯಲಿದೆ ಎಂದು ಡಾ.ರಾಜೇಂದ್ರ ಕುಮಾರ್ ಮಾಹಿತಿ ನೀಡಿದರು.
ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ದೇವಿಪ್ರಸಾದ್ ಶೆಟ್ಟಿ ಬೆಳಪು, ದ.ಕ. ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒ ಗೋಪಾಲಕೃಷ್ಣ ಭಟ್ ಮೊದಲಾದವರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com