ಮುಂದಿನ ವಾರ್ಷಿಕ ಮಹಾಸಭೆಯಲ್ಲಿ ನಿರ್ಧಾರ: ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಹೇಳಿಕೆ
ಮಂಗಳೂರು: ಜಿಲ್ಲಾ ಸಹಕಾರಿ ಯೂನಿಯನ್ ಸದಸ್ಯತ್ವ ಪಡೆದ ಸಂಘಗಳಿಗೆ ಡಿವಿಡೆಂಡ್ ನೀಡುವ ಬಗ್ಗೆ ಜಿಲ್ಲಾ ಸಹಕಾರಿ ಯೂನಿಯನ್‌ನ ಮುಂದಿನ ವಾರ್ಷಿಕ ಮಹಾಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಹೇಳಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದ.ಕ. ಜಿಲ್ಲಾ ಸಹಕಾರ ಯೂನಿಯನ್, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಸಹಕಾರ ಇಲಾಖೆ, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪಂಜ ಇವರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೂತನವಾಗಿ ಆಯ್ಕೆಯಾದ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿಗಳಿಗೆ ಜರುಗಿದ ಜಿಲ್ಲಾಮಟ್ಟದ ತರಬೇತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
https://chat.whatsapp.com/EbVKVnWB6rlHT1mWtsgbch
ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಪ್ರಗತಿಪಥದಲ್ಲಿ ಮುನ್ನಡೆಯಲು ಸಂಘದ ನಿರ್ದೇಶಕರು ಮತ್ತು ಸಿಬ್ಬಂದಿಗಳ ಪಾತ್ರ ಪ್ರಮುಖವಾಗಿರುತ್ತದೆ. ಸಹಕಾರ ಕಾಯ್ದೆ ನಿಯಮಗಳ ಬಗ್ಗೆ ಎನ್.ಪಿ.ಎ, ಎಸ್.ಎಲ್.ಆರ್ ಈ ವಿಷಯಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಬೇಕಾಗಿ ಜಿಲ್ಲಾ ಸಹಕಾರಿ ಯೂನಿಯನ್ ಜಿಲ್ಲೆಯ ಸಹಕಾರ ಸಂಘಗಳನ್ನು ಬಲಪಡಿಸುವ ಕಾರ್ಯವನ್ನು ಇಂತಹ ತರಬೇತಿಗಳ ಮುಖಾಂತರ ಮಾಡಲಾಗುವುದು ಎಂದರು.
ತರಬೇತಿ ಉದ್ಘಾಟಿಸಿದ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ ಮಾತನಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಗ್ರಾಮ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುವುದರಿಂದ ಸಂಘದ ನಿರ್ದೇಶಕರು ಮತ್ತು ಸಿಬ್ಬಂದಿಗೆ ಹೊಸದಾಗಿ ಜಾರಿಯಾದ ಕಾಯ್ದೆ ಕ್ರಮಗಳ ಬಗ್ಗೆ ಇಲಾಖೆಯ ಸುತ್ತೋಲೆಯ ಮಾಹಿತಿ ಅಗತ್ಯ. ಇಂತಹ ತರಬೇತಿ ಬಹಳ ಉಪಯುಕ್ತವಾಗಿದೆ ಎಂದರು.
ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್.ಎನ್ ಮನ್ಮಥ ಮಾತನಾಡಿ ಸಂಘ ಪ್ರಗತಿ ಹೊಂದಲು ಸಂಘದ ಅಂಕಿ ಅಂಶಗಳು, ನೈಜ ಚಿತ್ರಣ, ನಿರ್ದೇಶಕರು ಮತ್ತು ಸಿಬ್ಬಂದಿಗಳ ಕಾರ್ಯಕ್ಷಮತೆ ಹೆಚ್ಚಿಸಲು ಇಂತಹ ತರಬೇತಿಗಳು ಅವಶ್ಯಕ ಎಂದರು.
ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾದ ವಿಷ್ಣು ಭಟ್, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಸದಾನಂದ ಕಾರ್ಜ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಅಧೀಕ್ಷಕ ಎನ್.ಜೆ.ಗೋಪಾಲ್, ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ವಿಶ್ವನಾಥ ನಾಯರ್ ತರಬೇತಿ ನೀಡಿದರು. ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ವಿ. ಹೀರೆಮಠ ಸ್ವಾಗತಿಸಿದರು, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ್ ಪಿ ವಂದಿಸಿದರು. ಚಂದ್ರಶೇಖರ ಕಾರ್ಯಕ್ರಮ ನಿರೂಪಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com