ಹಣಕಾಸು ಇಲಾಖೆಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಸೂಚನೆ: ಸಚಿವ ಎಂ.ಬಿ ಪಾಟೀಲ್ ಹೇಳಿಕೆ
ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ, ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಹಾಗೂ ಇಂಡಿ ತಾಲೂಕಿನ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಹೇಗೆ ಅಗತ್ಯ ಆರ್ಥಿಕ ನೆರವು ಒದಗಿಸಬೇಕು ಎಂಬ ಬಗ್ಗೆ ಸರಿಯಾದ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
https://chat.whatsapp.com/EbVKVnWB6rlHT1mWtsgbch
ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಒದಗಿಸಬೇಕಾದ ನೆರವು ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು. ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಆರ್ಥಿಕ ನೆರವು ಬೇಕಾಗಿದೆ. ಅವಧಿ ಸಾಲ, ರೈತರಿಗೆ ಮಾಡಬೇಕಿರುವ ಹಣ ಪಾವತಿ, ಕಬ್ಬಿನ ಕಟಾವು, ಸಾಗಣೆ, ಸಕ್ಕರೆ ಮತ್ತು ವಿದ್ಯುತ್ ಉತ್ಪಾದನಾ ಘಟಕ ಸ್ಥಾಪನೆ ವೆಚ್ಚಗಳ ಭಾರ ವಿಪರೀತವಾಗಿದೆ. ಈ ಕಾರ್ಖಾನೆಗಳಿಗೆ ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ ಅಥವಾ ಬ್ಯಾಂಕ್ ಖಾತರಿ ಮೂಲಕ ಆರ್ಥಿಕ ಸಹಾಯ ಒದಗಿಸಿಕೊಡಬೇಕೆಂದು ಸಭೆಯ ಗಮನಕ್ಕೆ ತರಲಾಯಿತು. ಈ ಬಗ್ಗೆ ನಿಗಮದ ಜತೆಗೂ ಚರ್ಚಿಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ಪಾಟೀಲ್ ತಿಳಿಸಿದರು.



ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆಗೆ 192 ಕೋಟಿ ರೂ. ಮತ್ತು ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಗೆ 150 ಕೋಟಿ ರೂ. ಹಾಗೂ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಗೆ 130 ಕೋಟಿ ರೂ. ನೆರವು ಬೇಕಾಗಿದೆ. ಇಷ್ಟು ನೆರವು ದೊರಕಿಸಿ ಕೊಟ್ಟರೆ, ವಿದ್ಯುತ್ ಉತ್ಪಾದನೆಯಿಂದ ಬರುವ ಹಣವನ್ನು ಸಾಲದ ಕಡೆ ಪಾವತಿಸಲು ಕಾರ್ಖಾನೆಗಳು ಆಸಕ್ತಿ ಹೊಂದಿವೆ ಎಂದು ಅವರು ತಿಳಿಸಿದರು.
ಕೃಷ್ಣಾ ಕಾರ್ಖಾನೆಯು 27 ಮೆಗಾವ್ಯಾಟ್ ಮತ್ತು ನಂದಿ ಕಾರ್ಖಾನೆಯು 37 ಮೆಗಾವ್ಯಾಟ್ ಸಾಮರ್ಥ್ಯದ ಸಹವಿದ್ಯುತ್ (ಕೋಜೆನ್) ಘಟಕ ಸ್ಥಾಪಿಸುವ ಆಸಕ್ತಿ ಹೊಂದಿವೆ. ಜೊತೆಗೆ ಕೃಷ್ಣಾ ಹಾಗೂ ಭೀಮಾ ಕಾರ್ಖಾನೆಯು ಎಥೆನಾಲ್ ಉತ್ಪಾದನಾ ಘಟಕವನ್ನೂ ಸ್ಥಾಪಿಸಲು ಮುಂದಾಗಿದೆ. ಸಹಕಾರಿ ತತ್ವದ ಮೇಲೆ ನಡೆಯುತ್ತಿರುವ ಈ ಕಾರ್ಖಾನೆಗಳ ಪುನಶ್ಚೇತನ ಸಮರ್ಪಕವಾಗಿ ನಡೆಯಬೇಕಾಗಿದೆ ಎಂದು ಎಂ.ಬಿ ಪಾಟೀಲ್ ಹೇಳಿದರು. ಈ ಸಂಬಂಧ ಸಕ್ಕರೆ ಆಯುಕ್ತರು ಮತ್ತು ಎನ್.ಸಿ.ಡಿ.ಸಿ. ಅಧಿಕಾರಿಗಳ ಜತೆ ಸಮಗ್ರವಾಗಿ ಚರ್ಚಿಸಿ, ಸಮರ್ಪಕ ಪರಿಹಾರ ಕಂಡುಕೊಳ್ಳಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಈ ಎರಡೂ ಕಾರ್ಖಾನೆಗಳಿಗೆ ಸರಕಾರದ ಕಡೆಯಿಂದ ಸಕಾಲಿಕ ನೆರವು ಸಿಗುವಂತೆ ಮಾಡಲು ಎಲ್ಲ ಪ್ರಯತ್ನಗಳನ್ನೂ ಮಾಡಲಾಗುವುದು ಎಂದು ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಚಿವರಾದ ಎಚ್.ಕೆ ಪಾಟೀಲ್, ಶಿವಾನಂದ ಪಾಟೀಲ್, ಎಚ್.ಸಿ ಮಹದೇವಪ್ಪ, ಇಂಡಿ ಶಾಸಕ ಯಶವಂತರಾಯ ಗೌಡ ಪಾಟೀಲ, ಬೀಳಗಿ ಶಾಸಕ ಜೆ.ಟಿ ಪಾಟೀಲ, ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್, ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಹಣಕಾಸು ಇಲಾಖೆಯ ಕಾರ್ಯದರ್ಶಿ ಪಿ.ಸಿ ಜಾಫರ್, ನಂದಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಕುಮಾರ ದೇಸಾಯಿ ಜೈನಾಪುರ, ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ರಾಜಗೋಪಾಲ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com

