ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಸೆಪ್ಟೆಂಬರ್ 10ರಂದು ಸರಕಾರ ಚುನಾವಣೆ ನಡೆಸದಿದ್ದರೆ, ಚುನಾವಣೆ ನಡೆಸುವ ಬಗ್ಗೆ ನ್ಯಾಯಾಲಯದಿಂದಲೇ ಆದೇಶ ಮಾಡಲಾಗುವುದು ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ.
https://chat.whatsapp.com/FCEnlTkAKCC0MGPhXtX4i4
ಅಪೆಕ್ಸ್ ಬ್ಯಾಂಕಿನ ಚುನಾವಣೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಬ್ಯಾಂಕಿನ ನಿರ್ದೇಶಕರೂ ಆಗಿರುವ ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್. ಪಾಟೀಲ್, ನಿರ್ದೇಶಕ ಮಂಡಳಿಗೆ ಚುನಾವಣೆ ನಡೆದು ಎಂಟು ತಿಂಗಳು ಆಗಿದೆ. ಇಲ್ಲಿಯ ತನಕ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ನಡೆದಿಲ್ಲ. ಚುನಾವಣಾಧಿಕಾರಿಯನ್ನು ನೇಮಿಸಲಾಗಿದೆ ಎಂದು ಸಹಕಾರ ಚುನಾವಣಾ ಪ್ರಾಧಿಕಾರ ಕಳೆದ ಬಾರಿಯೇ ಹೇಳಿತ್ತು. ಈಗ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಆದರೆ, ಇದರ ಬಗ್ಗೆ ಸರಕಾರ ಈವರೆಗೆ ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಪರಿಸ್ಥಿತಿ ನೋಡಿದರೆ, ಸೆ.10ಕ್ಕೆ ಚುನಾವಣೆ ನಡೆಯುವ ಸಾಧ್ಯತೆಗಳಿಲ್ಲ. ಹಾಗಾಗಿ ನ್ಯಾಯಾಲಯದಿಂದಲೇ ಆದೇಶ ಮಾಡಬೇಕು ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸೆ.10ಕ್ಕೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿದೆ. ಕಾದು ನೋಡೋಣ. ಆ ದಿನ ಚುನಾವಣೆ ನಡೆಯದಿದ್ದರೆ, ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವ ಬಗ್ಗೆ ನ್ಯಾಯಾಲಯದಿಂದಲೇ ಆದೇಶ ಮಾಡಲಾಗುವುದು ಎಂದು ತಿಳಿಸಿದ ನ್ಯಾಯಪೀಠ ವಿಚಾರಣೆ ಸೆ.11ಕ್ಕೆ ಮುಂದೂಡಿತು.











